ಅಂಕೋಲಾ: ತಾಲೂಕಿನ ಶಿರೂರು ಗುಡ್ಡ ಕುಸಿತ (Shiruru Landslide) ಪ್ರದೇಶಕ್ಕೆ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಭೇಟಿ ನೀಡಿದ್ದಾರೆ.
ಶನಿವಾರ ಮದ್ಯಾಹ್ನ ಆಗಮಿಸಿದ ಕುಮಾರಸ್ವಾಮಿ ಪರಿಸ್ಥಿತಿ ಅವಲೋಕಿಸಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಅವರು ಗುಡ್ಡ ಕುಸಿತ ಮತ್ತು ಕಾರ್ಯಾಚರಣೆ ಬಗ್ಗೆ ಮಾಹಿತಿ ನೀಡಿದರು.
ಕಳೆದ ಐದು ದಿನಗಳಿಂದ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು ಮೃತ ಕುಟುಂಬಗಳಿಗೆ ಪರಿಹಾರ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಅವರು ಸಚಿವರಿಗೆ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಕುಮಾರಸ್ವಾಮಿ, 2008ರಲ್ಲಿ ಕೊಡಗು(Kodagu) ಕುಸಿತ ಘಟನೆ ನಡೆದಿತ್ತು. ಅವೈಜ್ಞಾನಿಕ ಕಾಮಗಾರಿಯಿಂದ ಭೂಕುಸಿತ ಆಗಿದ್ದು ಜನರಿಗೆ ತೊಂದರೆ ಆಗುತ್ತಿದೆ. ಒಂದೇ ಕುಟುಂಬದ ಐವರು ಪ್ರಾಣ ಕಳೆದುಕೊಂಡಿರುವುದು ದುರ್ದೈವ ಎಂದಿದ್ದಾರೆ.
ಈಗಾಗಲೇ ಜೀವ ಕಳೆದುಕೊಂಡವರಿಗೆ ಪರಿಹಾರ ನೀಡಲಾಗಿದೆ. ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಪರಿಹಾರ ನಿಧಿಯಿಂದ ಇನ್ನಷ್ಟು ಪರಿಹಾರ ದೊರಕಿಸಿಕೊಡುವ ಪ್ರಯತ್ನ ಮಾಡುತ್ತೇನೆಂದು ಹೇಳಿದ್ದಾರೆ.

