ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news)ಮುಂಡಗೋಡ(Mundgod): ತಾಲೂಕಿನ ಬೆಡಸಗಾಂವ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ನೀಡಲಾದ ಪಾದರಕ್ಷೆಗಳು ತೀರಾ ಕಳಪೆ ಮಟ್ಟದ್ದಾಗಿವೆ ಎಂದು ಆರೋಪಿಸಿ, ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ (SDMC) ಹಾಗೂ ಪೋಷಕರು ಅವುಗಳನ್ನು ಸ್ವೀಕರಿಸಲು ನಿರಾಕರಿಸಿದ್ದಾರೆ.
ಶಾಲಾ ಆವರಣದಲ್ಲಿ ಇತ್ತೀಚೆಗೆ ಜರುಗಿದ ಸಭೆಯಲ್ಲಿ ಪಾದರಕ್ಷೆಗಳ ಗುಣಮಟ್ಟದ ಕುರಿತು ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಪೋಷಕರು ಮತ್ತು ಎಸ್‌ಡಿಎಂಸಿ ಪದಾಧಿಕಾರಿಗಳು, ಇವುಗಳನ್ನು ಮಕ್ಕಳು ಧರಿಸಲು ಸಾಧ್ಯವೇ ಇಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ. ಸರ್ಕಾರವು ವಿದ್ಯಾರ್ಥಿಗಳಿಗೆ ನೀಡುವ ಉಚಿತ ಸೌಲಭ್ಯಗಳು ನಿಗದಿತ ಮಾನದಂಡದಂತೆ ಇರಬೇಕು. ಇಂತಹ ಕಳಪೆ ಸಾಮಗ್ರಿಗಳಿಂದ ಮಕ್ಕಳಿಗೆ ಅನಾನುಕೂಲವಾಗಲಿದ್ದು, ಈ ಕೂಡಲೇ ವಿತರಿಸಲಾದ ಪಾದರಕ್ಷೆಗಳನ್ನು ಹಿಂಪಡೆದು ಉತ್ತಮ ಗುಣಮಟ್ಟದ ಪಾದರಕ್ಷೆಗಳನ್ನ ಪೂರೈಸಬೇಕೆಂದು ಅವರು ಶಿಕ್ಷಣ ಇಲಾಖೆಯ ಅಧಿಕಾರಿಗಳನ್ನು ಆಗ್ರಹಿಸಿದ್ದಾರೆ.
ಇಷ್ಟೇ ಅಲ್ಲದೆ, ಕಳಪೆ ಶೂ ವಿತರಣೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಎಸ್‌ಡಿಎಂಸಿ ಮತ್ತು ಸಾರ್ವಜನಿಕರು, ಅಗತ್ಯ ದಾಖಲೆಗಳೊಂದಿಗೆ ಲೋಕಾಯುಕ್ತರಿಗೆ ದೂರು ಸಲ್ಲಿಸಲು ಸಭೆಯಲ್ಲಿ ಸರ್ವಾನುಮತದ ನಿರ್ಣಯ ಕೈಗೊಂಡಿದ್ದಾರೆ. ಸಂಬಂಧಪಟ್ಟ ಶಿಕ್ಷಣಾಧಿಕಾರಿಗಳು ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.
—————-