ಬೆಂಗಳೂರು(BANGLORE) :  ಮುಡಾ(MUDA) ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಕಷ್ಟ ಎದುರಾಗಿದೆ. ಈ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲ ಥಾವರ್ ಚಂದ್ ಗೆಹಲೊಟ್  ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾರೆ.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ಹಗರಣ ಆರೋಪಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ವಿಚಾರಣೆ, ತನಿಖೆ ನಡೆಸಬಹುದು ಎಂದು ರಾಜ್ಯಪಾಲರು ಅನುಮತಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆ ಶುರುವಾಗಲಿದೆ. ಸಾಮಾಜಿಕ ಕಾರ್ಯಕರ್ತ ಟಿ.ಜೆ. ಅಬ್ರಾಹಂ ನೀಡಿದ್ದ ದೂರಿಗೆ ಸಂಬಂಧಿಸಿದಂತೆ ರಾಜ್ಯಪಾಲರು ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದು ರಾಜ್ಯ ರಾಜಕೀಯದಲ್ಲಿ ಸಂಚಲನ ಉಂಟು ಮಾಡಿದೆ.

ಈ ನಡುವೆ ಸಿಎಂ  ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಇಂದು ಸಂಜೆ 5 ಗಂಟೆಗೆ ತುರ್ತಾಗಿ ವಿಶೇಷ ಸಚಿವ ಸಂಪುಟ ಸಭೆ ಕರೆಯಲಾಗಿದೆ. ವಿಧಾನಸೌಧದ ಸಚಿವಸಂಪುಟ ಸಭಾಭವನದಲ್ಲಿ ಈ ಸಭೆ ನಡೆಯಲಿದೆ. ಸರಕಾರದ ಮುಂದಿನ ನಡೆಯ ಬಗ್ಗೆ  ಸಭೆಯಲ್ಲಿ ಚರ್ಚೆಯಾಗುವ ಸಾಧ್ಯತೆ ಇದೆ. ಜೊತೆಗೆ ಮುಖ್ಯಮಂತ್ರಿಗಳು ಹೈಕೋರ್ಟ್ ಮೆಟ್ಟಿಲೇರಲು ಸಿದ್ಧತೆ ನಡೆಸಿದ್ದು  ಕಾನೂನು ಸಲಹೆಗಾರರ ಬಳಿ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.