ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news) ಕಾರವಾರ : ಉತ್ತರಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ಜುಲೈ 9ರ ಬೆಳಿಗ್ಗೆ 8.30ರವರೆಗೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ. ಈ ಅವಧಿಯಲ್ಲಿ ಗಂಟೆಗೆ 40–50 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕೆಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ(DC Lakshmipriya) ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಿಲ್ಲೆಯಾದ್ಯಂತ ಜಿಲ್ಲಾ ತುರ್ತು ಕಾರ್ಯಾಚರಣೆ ಕೇಂದ್ರವನ್ನು 24×7 ಕಾರ್ಯನಿರ್ವಹಣೆಗೆ ಸಜ್ಜುಗೊಳಿಸಲಾಗಿದ್ದು, ಅಗತ್ಯ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಮಳೆ ಹಾನಿ ಸಂಭವಿಸಿದರೆ ತಕ್ಷಣ ಮಾಹಿತಿ ನೀಡುವಂತೆ ಸಾರ್ವಜನಿಕರಿಗೆ ಮನವಿ ಮಾಡಲಾಗಿದೆ.
ಜಿಲ್ಲಾಡಳಿತದ ಸೂಚನೆಗಳು: ನದಿ, ಹೊಳೆ, ಜಲಾಶಯ, ಸಮುದ್ರ ತೀರ ಹಾಗೂ ಅಪಾಯಕಾರಿ ಪ್ರದೇಶಗಳಿಗೆ ಸಾರ್ವಜನಿಕರು ತೆರಳಬಾರದು.
ಬಲವಾದ ಗಾಳಿಯ ಸಮಯದಲ್ಲಿ ಮರಗಳು, ವಿದ್ಯುತ್ ಕಂಬಗಳು ಹಾಗೂ ಜೀರ್ಣಾವಸ್ಥೆಯ ಕಟ್ಟಡಗಳ ಸಮೀಪ ನಿಲ್ಲದಂತೆ ಸೂಚನೆ.
ಮೀನುಗಾರರು ಸಮುದ್ರಕ್ಕೆ ತೆರಳದಂತೆ ಎಚ್ಚರಿಕೆ ನೀಡಲಾಗಿದೆ.
ಅಗತ್ಯವಿದ್ದರೆ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಕ್ಕೆ ಸಹಕರಿಸುವಂತೆ ಮನವಿ.
ತುರ್ತು ಪರಿಸ್ಥಿತಿಯಲ್ಲಿ ಜಿಲ್ಲಾ ಕಂಟ್ರೋಲ್ ರೂಂ (24×7) 08382-229857 ಅಥವಾ ಮೊಬೈಲ್ 9483511015 ಸಂಖ್ಯೆಗೆ ಸಂಪರ್ಕಿಸಲು ಸೂಚಿಸಲಾಗಿದೆ.
ಜಿಲ್ಲಾಡಳಿತವು ಎಲ್ಲಾ ಇಲಾಖೆಗಳಿಗೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲು ಹಾಗೂ ಸಾರ್ವಜನಿಕರ ಸುರಕ್ಷತೆಗೆ ಆದ್ಯತೆ ನೀಡುವಂತೆ ನಿರ್ದೇಶನ ನೀಡಲಾಗಿದೆ.
