ಬೆಂಗಳೂರು: ರಾಜ್ಯದಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು, ಆಗಸ್ಟ್ ಮೂರರವರೆಗೆ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಕೆಲವೆಡೆ ಭೂಕುಸಿತ ಉಂಟಾಗಿದೆ. ಕೇರಳದ ವಯನಾಡಿಗೆ ಹೊಂದಿಕೊಂಡಿರುವ ಕೊಡಗಿನಲ್ಲೂ ಕೂಡ ಭಾರಿ ವರ್ಷಧಾರೆಯಾಗುತ್ತಿದೆ.
ಹೀಗಾಗಿ ಹವಾಮಾನ ಇಲಾಖೆ ಕರಾವಳಿಯ ದಕ್ಷಿಣಕನ್ನಡ, ಉಡುಪಿ ಹಾಗೂ ಮಲೆನಾಡಿನ ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ಕೊಡಗು ಜಿಲ್ಲೆಗಳಿಗೆ ಆಗಸ್ಟ್ ಒಂದರ ಬೆಳಿಗ್ಗೆವರೆಗೆ ರೆಡ್ ಅಲರ್ಟ್ ಘೋಷಿಸಿದೆ. ಉತ್ತರಕನ್ನಡ ಮತ್ತು ಬೆಳಗಾವಿ ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ನೀಡಲಾಗಿದೆ.
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಿಗೆ ಆಗಸ್ಟ್ ಒಂದರಿಂದ ಆರೆಂಜ್ ಅಲರ್ಟ್ ನೀಡಲಾಗಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಆ.1ರಿಂದ 3ರವರೆಗೆ ಹೆಚ್ಚಿನ ಪ್ರಮಾಣದ ಮಳೆಯಾಗುವ ನಿರೀಕ್ಷೆ ಇದೆ. ಬೆಂಗಳೂರು ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಮಾತ್ರ ಸಾಧಾರಣ ಪ್ರಮಾಣದ ವರ್ಷಧಾರೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ತಿಳಿಸಿದೆ.
ಗಂಟೆಗೆ 40 ರಿಂದ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಹಿನ್ನೆಲೆಯಲ್ಲಿ ಆಗಸ್ಟ್ ಮೂರರವರೆಗೆ ಮೀನುಗಾರರು ಕಡಲಿಗೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.