ಬೆಂಗಳೂರು: ನೈರುತ್ಯ ಪದವೀಧರರ ಕ್ಷೇತ್ರದಿಂದ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಉಡುಪಿಯ ಮಾಜಿ ಶಾಸಕ ರಘುಪತಿ ಭಟ್ ಅವರನ್ನು ಬಿಜೆಪಿಯಿಂದ ಆರು ವರ್ಷಗಳ ಕಾಲ ಉಚ್ಚಾಟಿಸಲಾಗಿದೆ.
ಬಿಜೆಪಿ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ್ ಉಚ್ಚಾಟನೆ ಆದೇಶ ಹೊರಡಿಸಿದ್ದಾರೆ. ಬಿಜೆಪಿ ಪಕ್ಷದಿಂದ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಎಂಎಲ್ಸಿ ಚುನಾವಣೆಗೆ ರಘುಪತಿ ಭಟ್ ಪಕ್ಷೇತರರಾಗಿ ಸ್ಪರ್ಧೆಗೆ ಇಳಿದಿದ್ದರು. ಪಕ್ಷದ ಹಲವು ನಾಯಕರು ಭಟ್ ಅವರ ಮನವೊಲಿಸಿದ್ದರೂ ಪ್ರಯೋಜನ ಆಗಿರಲಿಲ್ಲ. ಸ್ಪರ್ಧೆಯಿಂದ ಹಿಂದೆ ಸರಿಯುವಂತೆ ಬಿಜೆಪಿ ಹೈಕಮಾಂಡ್ ಸೂಚಿಸಿತ್ತು. ಆದರೆ, ನಾಮಪತ್ರ ಹಿಂದೆ ತೆಗೆದುಕೊಳ್ಳದೆ ರಘುಪತಿ ಭಟ್ ಕಣದಲ್ಲಿ ಉಳಿದಿದ್ದಾರೆ.
ಹೀಗಾಗಿ ಬಿಜೆಪಿ ಪಕ್ಷದ ಶಿಸ್ತು ಸಮಿತಿ ಕ್ರಮ ಕೈಗೊಂಡಿದೆ. ಸೂಚನೆ ಕಡೆಗಣಿಸಿ ವಿಧಾನ ಪರಿಷತ್ ಚುನಾವಣೆಯಲ್ಲಿ ನೈರುತ್ಯ ಪದವೀಧರರ ಕ್ಷೇತ್ರದಿಂದ ಪಕ್ಷದ ಅಧಿಕೃತ ಅಭ್ಯರ್ಥಿಯ ವಿರುದ್ಧ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಪಕ್ಷದ ಮುಜುಗರಕ್ಕೆ ಕಾರಣರಾಗಿದ್ದೀರಿ. ಇದು ಪಕ್ಷದ ಶಿಸ್ತು ಉಲ್ಲಂಘನೆಯಾಗಿದೆ. ಆದ್ದರಿಂದ ತಮ್ಮನ್ನು ತಕ್ಷಣದಿಂದ ಜಾರಿಗೆ ಬರುವಂತೆ ಎಲ್ಲಾ ಜವಾಬ್ದಾರಿಗಳಿಂದ ಮುಕ್ತಗೊಳಿಸಿ ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಮಾಜಿ ಶಾಸಕರಾಗಿರುವ ರಘುಪತಿ ಭಟ್ ನೈರುತ್ಯ ಪದವೀಧರರ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಪಕ್ಷ ಡಾ.ಧನಂಜಯ ಸರ್ಜಿಯನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸಿತ್ತು. ಇದರಿಂದ ಬೇಸರಗೊಂಡ ರಘಪತಿ ಭಟ್ ಬಂಡಾಯ ಬಾವುಟ ಹಾರಿಸಿದ್ದರು. ಅಲ್ಲದೆ ತಾನು ಎಂದೆಂದಿಗೂ ಬಿಜೆಪಿಗನೇ ಎಂದು ಹೇಳಿಕೊಂಡಿದ್ದರು. ಇದೀಗ ಪಕ್ಷದ ಶಿಸ್ತು ಕ್ರಮ ಎದುರಿಸಬೇಕಾಗಿದೆ.