ಇ ಸಮಾಚಾರ ಡಿಜಿಟಲ್ ನ್ಯೂಸ್(esamachara digital news) ಭಟ್ಕಳ(Bhatkal) : ಶಿರಾಲಿಯ ಸರ್ಕಾರಿ ಆಸ್ಪತ್ರೆಯಲ್ಲಿ(Shirali Govt Hospital) ನವಜಾತ ಶಿಶು ಸಾವನ್ನಪ್ಪಿದ ಹಿನ್ನೆಲೆಯಲ್ಲಿ ವೈದ್ಯರ ನಿರ್ಲಕ್ಷ್ಯವೇ ಸಾವಿಗೆ ಕಾರಣ ಎಂದು ಆರೋಪಿಸಿ ಸಂಬಂಧಿಕರು ಶಿಶು ವೈದ್ಯರು ಹಾಗೂ ತರಬೇತಿ ವೈದ್ಯರ ಮೇಲೆ ಹಲ್ಲೆ ನಡೆಸಿದ ಆರೋಪ ಕೇಳಿಬಂದಿದೆ.
ಈ ಸಂಬಂಧ ಶಿಶು ವೈದ್ಯ ಲೀಲಾಧರ ಮೊಗೇರ ಎಂಬುವವರು ಭಟ್ಕಳ(Bhatkal) ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ವೈದ್ಯರ ನಿರ್ಲಕ್ಷ್ಯದಿಂದ ಮಗು ಸಾವನ್ನಪ್ಪಿದೆ ಎಂದು ಆರೋಪಿಸಿ ಮೃತ ಮಗುವಿನ ಸಂಬಂಧಿಕರು ಕೂಡ ದೂರು ನೀಡಲು ಮುಂದಾಗಿದ್ದಾರೆ.
ಭಟ್ಕಳ(Bhatkal) ತಾಲೂಕಿನ ಶಿರಾಲಿಯ ಸತೀಶ ರಾಮಾ ನಾಯ್ಕ ಹಾಗೂ ಹೇಮಾ ನಾಯ್ಕ ದಂಪತಿಯ ಎರಡನೇ ಮಗು ಅ. 27ರಂದು ಜನಿಸಿತ್ತು. ಜಾಂಡೀಸ್ ಸಮಸ್ಯೆಯಿಂದ ಬಳಲುತ್ತಿದ್ದ ಮಗುವಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಬಳಿಕ ತಾಯಿ ಮಗುವಿಗೆ ಹಾಲುಣಿಸುತ್ತಿದ್ದ ಸಂದರ್ಭದಲ್ಲಿ ಮಗು ನೀಲಿ ಬಣ್ಣಕ್ಕೆ ತಿರುಗಿ ಉಸಿರಾಟದ ತೊಂದರೆ ಅನುಭವಿಸಿದೆ ಎನ್ನಲಾಗಿದೆ.
ತಕ್ಷಣ ಶಿಶು ವೈದ್ಯರು ಮಗುವನ್ನು ಪರೀಕ್ಷಿಸಿ ಚಿಕಿತ್ಸೆ ನೀಡಿದರೂ, ಮಗು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದೆ ಎಂದು ತಿಳಿದುಬಂದಿದೆ.
ಮಗುವಿನ ಸಾವಿನಿಂದ ಆಕ್ರೋಶಗೊಂಡ ಸಂಬಂಧಿಕರು ವೈದ್ಯರ ನಿರ್ಲಕ್ಷ್ಯವೇ ಸಾವಿಗೆ ಕಾರಣ ಎಂದು ಆರೋಪಿಸಿ ಶಿಶು ವೈದ್ಯರು ಹಾಗೂ ತರಬೇತಿ ವೈದ್ಯರ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.
ಈ ಘಟನೆಗೆ ಸಂಬಂಧಿಸಿದಂತೆ ಶಿಶು ವೈದ್ಯ ಲೀಲಾಧರ ಮೊಗೇರ ಅವರು ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ವೈದ್ಯರ ಮೇಲೆ ನಡೆದ ಹಲ್ಲೆ ಘಟನೆಯನ್ನು ಕರ್ನಾಟಕ ಸರ್ಕಾರಿ ವೈದ್ಯರ ಸಂಘ, ಬೆಂಗಳೂರು ಹಾಗೂ ಭಾರತೀಯ ವೈದ್ಯಕೀಯ ಸಂಘ (IMA) ಖಂಡಿಸಿವೆ.
ಇನ್ನೊಂದೆಡೆ, ವೈದ್ಯರ ನಿರ್ಲಕ್ಷ್ಯದಿಂದಲೇ ನವಜಾತ ಶಿಶು ಮೃತಪಟ್ಟಿದೆ ಎಂದು ಆರೋಪಿಸಿರುವ ಮಗುವಿನ ಸಂಬಂಧಿಕರು ಪೊಲೀಸರ ಮೊರೆ ಹೋಗಿದ್ದಾರೆ. ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕ ಈ ಸಂಬಂಧ ಪ್ರತಿದೂರು ದಾಖಲಾಗಿದೆ ಎಂದು ತಿಳಿದುಬಂದಿದೆ.
ಮಗುವಿನ ಸಾವಿಗೆ ನಿಖರ ಕಾರಣವೇನು ಎಂಬುದು ಮರಣೋತ್ತರ ಪರೀಕ್ಷೆಯ ವರದಿ ಹಾಗೂ ಪೊಲೀಸ್ ತನಿಖೆಯಿಂದ ಸ್ಪಷ್ಟವಾಗಬೇಕಿದೆ.