ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news) ಶಿವಮೊಗ್ಗ(Shivamogga) : ಅಭಿವೃದ್ಧಿ ಕಾಮಗಾರಿಗಳಿಂದಾಗಿ ಜನವರಿ ಒಂದರಿಂದ ಮಾರ್ಚ್ ಹದಿನೈದರವರೆಗೆ ಜೋಗ ಜಲಪಾತ ವೀಕ್ಷಿಸಲು ಜಿಲ್ಲಾಧಿಕಾರಿಗಳು ನಿಷೇಧಿಸಿದ್ದ ಆದೇಶವನ್ನ ಸಡಿಲಿಸಲಾಗಿದೆ. ಇದೀಗ ಹೊಸ ವರ್ಷಾಚರಣೆ ಪ್ರಯುಕ್ತ ಜಿಲ್ಲಾಡಳಿತವು ಪ್ರವಾಸಿಗರಿಗೆ ಸಿಹಿ ಸುದ್ದಿ ನೀಡಿದೆ.
ಜೋಗ ನಿರ್ವಹಣಾ ಪ್ರಾಧಿಕಾರದ ಮುಖ್ಯ ದ್ವಾರವನ್ನು ಹೊರತುಪಡಿಸಿ ಉಳಿದೆಲ್ಲ ಪರ್ಯಾಯ ಸ್ಥಳಗಳಿಂದ ಪ್ರವಾಸಿಗರಿಗೆ ಜೋಗ ಜಲಪಾತ ವೀಕ್ಷಿಸಲು ಜಿಲ್ಲಾಡಳಿತ ಅವಕಾಶ ಕಲ್ಪಿಸಿಕೊಟ್ಟಿದೆ.
ಜೋಗಕ್ಕೆ ಪ್ರವಾಸಕ್ಕೆ ಬರುವ ಪ್ರವಾಸಿಗರು ವ್ಯೂ ಪಾಯಿಂಟ್, ಯಾತ್ರಿ ನಿವಾಸ, ರಾಣಿ ಫಾಲ್ಸ್, ಮುಂಬೈ ಬಂಗಲೆ, ಮುಂಗಾರು ಮಳೆ ಪಾಯಿಂಟ್ ಸೇರಿದಂತೆ ಮೊದಲಾದೆಡೆಯಿಂದ ಜಲಪಾತವನ್ನು ವೀಕ್ಷಿಸಬಹುದು ಎಂದು ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ.
ಪ್ರತಿ ವರ್ಷವೂ ಡಿಸೆಂಬರ್ ಕೊನೆಯ ವಾರದಲ್ಲಿ ಜೋಗಕ್ಕೆ ಪ್ರವಾಸಿಗರ ಸಂಖ್ಯೆ ಹೆಚ್ಚಾಗುತ್ತಿತ್ತು. ಆದರೆ, ಈ ವರ್ಷ ಪ್ರವೇಶ ನಿಷೇಧಿಸುವ ಮುನ್ನವೇ ಪ್ರವಾಸಿಗರ ಸಂಖ್ಯೆ ಕಡಿಮೆಯಾಗಿತ್ತು. ಜೋಗ ವೀಕ್ಷಣೆಯ ಸ್ಥಳಗಳಲ್ಲಿ ಬ್ಯಾರಿಕೇಡ್ಗಳನ್ನು ಹಾಕಲಾಗಿದ್ದು, ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
ಜೋಗ ಜಲಪಾತದಲ್ಲಿ ಹಲವು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ. ಜಲಪಾತ ವೀಕ್ಷಿಸಲು ತೆರಳುವ ಮುಖ್ಯ ಪ್ರವೇಶ ದ್ವಾರದ ಗೋಪುರ ನಿರ್ಮಾಣ ಕಾಮಗಾರಿಯೂ ಪ್ರಗತಿಯಲ್ಲಿದೆ. ಇದರಿಂದಾಗಿ 3 ತಿಂಗಳ ಕಾಲ ಜೋಗ ಜಲಪಾತಕ್ಕೆ ಪ್ರವಾಸಿಗರಿಗೆ ನಿರ್ಬಂಧ ಹೇರಿ ಜಿಲ್ಲಾಡಳಿತ ಈ ಹಿಂದೆ ಆದೇಶ ಹೊರಡಿಸಿತ್ತು.
ಇದನ್ನು ಓದಿ : ನ್ಯೂ ಹೈ ಸ್ಕೂಲ್ ಬಾಡ ತಂಡ ಕ್ರಿಕೆಟ್ ನಲ್ಲಿ ಚಾಂಪಿಯನ್