ಇ ಸಮಾಚಾರ ಡಿಜಿಟಲ್ ನ್ಯೂಸ್(esamachara digital news)ಉಡುಪಿ/ಬ್ರಹ್ಮಾವರ (Udupi /Brahmavara): ಸಾಸ್ತಾನ ಟೋಲ್ ಪ್ಲಾಝಾದ (Sastana Tollplaza) ಅನತಿ ದೂರದಲ್ಲಿರುವ ಬ್ರಹ್ಮಾವರ ತಾಲೂಕು ವ್ಯಾಪ್ತಿಯ ಗುಂಡ್ಮಿ ಅಂಬಾಗಿಲು (Gundmi Ambagilu) ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ.

ಕಾರೊಂದು ಆಟೋ ರಿಕ್ಷಾಕ್ಕೆ ಢಿಕ್ಕಿ ಹೊಡೆದು ಬಳಿಕ ಕಮರಿಗೆ ಹಾರಿ ಸಂಪೂರ್ಣವಾಗಿ ಹೊತ್ತಿ ಉರಿದ ಘಟನೆ ನಡೆದಿದೆ.

​ಅತಿ ವೇಗದಲ್ಲಿದ್ದ ಕಾರು ನಿಯಂತ್ರಣ ತಪ್ಪಿ ಮೊದಲಿಗೆ ಆಟೋ ರಿಕ್ಷಾಕ್ಕೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ರಿಕ್ಷಾದಲ್ಲಿದ್ದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಇತ್ತ ರಿಕ್ಷಾಕ್ಕೆ ಢಿಕ್ಕಿ ಹೊಡೆದ ರಭಸಕ್ಕೆ ಕಾರು ರಸ್ತೆ ಬದಿಯ ಕಮರಿಗೆ ಹಾರಿದೆ. ಅಪಘಾತದ ತೀವ್ರತೆಗೆ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲಿ ಕಾರು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ.

​ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ದಳದ(Fire Brigade) ಸಿಬ್ಬಂದಿಗಳು ಕಾರಿಗೆ ಹತ್ತಿದ್ದ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕೋಟ ಪೊಲೀಸ್ ಠಾಣೆಯ(Kota Police Station) ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.