ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news) ಬಂಟ್ವಾಳ(Bantwal): ಇಲ್ಲಿನ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ(KSRTC Bus Stand) ಯುವತಿಯೋರ್ವಳನ್ನ ಮಾರಕಾಸ್ತ್ರಗಳಿಂದ ಬರ್ಬರವಾಗಿ ಹತ್ಯೆ ನಡೆಸಿದ ಘಟನೆ ನಡೆದಿದೆ.

ಮೃತ ಯುವತಿ ಲಾವಣ್ಯ ಎಂದು ಗುರುತಿಸಲಾಗಿದ್ದು ಕಕ್ಯಪದವು ನಿವಾಸಿ ಎನ್ನಲಾಗಿದೆ. ಕಲ್ಲಡ್ಕದ ಖಾಸಗಿ ನರ್ಸಿಂಗ್ ಹೋಮ್‌ನಲ್ಲಿ(Nursing Home) ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

ಮೃತ ಲಾವಣ್ಯ ಅವರು ಕಕ್ಯಪದವು ಕಡೆಗೆ ತೆರಳಲು ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಕುಳಿತಿದ್ದರು ಎನ್ನಲಾಗಿದೆ. ಈ ವೇಳೆ ಅವರು ತಮ್ಮ ಸಂಬಂಧಿಕರೊಬ್ಬರಿಗೆ ದೂರವಾಣಿ ಕರೆ ಮಾಡಿ, “ತನ್ನ ಪಕ್ಕದಲ್ಲಿ ಓರ್ವ ಯುವಕ ಕುಳಿತಿದ್ದಾನೆ” ಎಂದು ತಿಳಿಸಿದ್ದು, ಬಳಿಕ ಸಂಪರ್ಕ ಕಡಿತಗೊಂಡಿದೆ.

ಬಸ್‌ನಲ್ಲಿದ್ದ ಪ್ರಯಾಣಿಕರ ಮಾಹಿತಿ ಪ್ರಕಾರ, ಬಳಿಕ ಯುವತಿ ಬಸ್‌ನಿಂದ ಕೆಳಗಿಳಿದಿದ್ದಾರೆ. ಅವರು ಇಳಿದ ತಕ್ಷಣ ಯುವಕ ಆಕೆಯನ್ನು ಬೆನ್ನಟ್ಟಿದ್ದಾನೆ. ತನ್ನ ಬ್ಯಾಗ್‌ನಿಂದ ಹರಿತವಾದ ಆಯುಧವನ್ನು ಹೊರತೆಗೆದಾಗ ಯುವತಿ ಓಡಿ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದಾಳೆ. ಈ ವೇಳೆ ಯುವಕ ಯುವತಿಯ ಮೇಲೆ ಮಾರಕವಾಗಿ ಹಲ್ಲೆ ನಡೆಸಿ, ಸ್ಥಳದಿಂದ ಪರಾರಿಯಾಗಿದ್ದಾನೆ.

ಘಟನೆಯಿಂದ ಕೆಎಸ್‌ಆರ್‌ಟಿಸಿ ಬಸ್(KSRTC BUS) ನಿಲ್ದಾಣದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಮಾಹಿತಿ ತಿಳಿಯುತ್ತಿದ್ದಂತೆಯೇ ಬಂಟ್ವಾಳ ಉಪವಿಭಾಗದ(Bantwal Subdivision) ಪೊಲೀಸ್ ಅಧಿಕಾರಿಗಳು, ನಗರ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯ ಪತ್ತೆಗಾಗಿ ವ್ಯಾಪಕ ಶೋಧ ಕಾರ್ಯ ಆರಂಭಿಸಿದ್ದು, ಘಟನೆಯ ನಿಖರ ಕಾರಣ ಮತ್ತು ಹಿನ್ನೆಲೆಯ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ‌.